ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಡಿಪುರ ಚೌಡಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಾನವ-ಕಾಡುಪ್ರಾಣಿ ಸಂಘರ್ಷದಿಂದ ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ನಿತ್ಯವೂ ಕಾಡಿನಿಂದ ನಾಡಿಗೆ ಲಗ್ಗೆಯಿಡುತ್ತಿರುವ ಗಜಪಡೆ, ರೈತರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳನ್ನು ತುಳಿದು ಧ್ವಂಸ ಮಾಡುತ್ತಿವೆ. ಇದರಿಂದ ಕಂಗಾಲಾಗಿರುವ ಅನ್ನದಾತರು, ಸ್ಥಳಕ್ಕೆ ಭೇಟಿ ನೀಡಿದ ಬಂಡೀಪುರ ಅರಣ್ಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.