ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ ನೆಪದಲ್ಲಿ ಬೃಹತ್ ಸಮಾವೇಶ

Edited By:

Updated on: Nov 19, 2026 | 10:10 AM

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ರಾಜಕೀಯ ವರ್ಚಸ್ಸು ಕ್ಷೀಣಿಸಿದೆ ಎಂಬ ಮಾತುಗಳ ಹಾಗೂ ಚರ್ಚೆಗಳ ನಡುವೆ, ನವೆಂಬರ್ 26ರಂದು ಮೈಸೂರಿನಲ್ಲಿ ಬೃಹತ್ ಸಂವಿಧಾನ ದಿನಾಚರಣೆ ಆಯೋಜಿಸಿದ್ದಾರೆ. ಇದರ ಮೂಲಕ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದು, ಈ ಕಾರ್ಯಕ್ರಮ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು, ನವೆಂಬರ್ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಿಂದ ಕೆಳಗಿಳಿದ ನಂತರವೂ ತಮ್ಮ ಖದರ್ ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ವರ್ಚಸ್ಸು ಕ್ಷೀಣಿಸುತ್ತಿದೆ ಎಂಬ ಮಾತುಗಳ ಹಾಗೂ ಗುಸುಗುಸುಗಳ ನಡುವೆ, ಸಿದ್ದರಾಮಯ್ಯ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಇದಕ್ಕಾಗಿ ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಅಹಿಂದ ಶಕ್ತಿ ಪ್ರದರ್ಶನಕ್ಕಾಗಿ ಬಳಸಿಕೊಳ್ಳುವ ರಣತಂತ್ರವನ್ನು ಸಿದ್ದರಾಮಯ್ಯರ ಆಪ್ತ ಬಳಗ ರೂಪಿಸಿದೆ.

ಲಕ್ಷಾಂತರ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಬೃಹತ್ ಶಕ್ತಿ ಸಮಾವೇಶ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ನಾಯಕರಿಗೆ ಆಹ್ವಾನ ನೀಡಲಾಗಿದೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಸಚಿವರಾದ ನರೇಂದ್ರಸ್ವಾಮಿ, ಚಲುವರಾಯಸ್ವಾಮಿ, ಶಿವಲಿಂಗೇಗೌಡ, ಶಾಸಕರು ಮತ್ತು ಪರಿಷತ್ ಸದಸ್ಯರು ಹಾಜರಾಗಿದ್ದರು. ಆದರೆ, ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮತ್ತು ಅವರ ಪುತ್ರ ಸುನೀಲ್ ಬೋಸ್ ಸಭೆಯಿಂದ ದೂರ ಉಳಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More