ಏತ ನೀರಾವರಿ ಯೋಜನೆ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಮುಂಡರಗಿ-ಯಕ್ಲಾಸಪುರ ರಸ್ತೆಯಲ್ಲಿರುವ ಸಾವಿರಾರು ಮರಗಳಿಗೆ ಅಪಾಯ

Edited By:

Updated on: Sep 27, 2026 | 3:02 PM

ಗದಗ ಜಿಲ್ಲೆಯ ಮುಂಡರಗಿ-ಯಕ್ಲಾಸಪುರ ರಸ್ತೆಯಲ್ಲಿರುವ ಸಾವಿರಾರು ಮರಗಳಿಗೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿದ್ಯುತ್ ಕಂಬಗಳ ಅಳವಡಿಕೆಯಿಂದ ಆತಂಕ ಎದುರಾಗಿದೆ. ಅನುಮತಿಯಿಲ್ಲದೆ ವಿದ್ಯುತ್ ಕಂಬಗಳನ್ನು ನೆಟ್ಟಿರುವುದಕ್ಕೆ ಪರಿಸರ ಪ್ರೇಮಿಗಳು ಮತ್ತು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮರಗಳ ಮಾರಣಹೋಮ ತಡೆಯಲು ಹೋರಾಟದ ಎಚ್ಚರಿಕೆ ನೀಡಿವೆ.

ಗದಗ, ಸೆಪ್ಟೆಂಬರ್ 27: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಿಂದ ಯಕ್ಲಾಸಪುರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಯು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅರಣ್ಯ ಇಲಾಖೆಯಿಂದ ಕಳೆದ ಹತ್ತು ವರ್ಷಗಳಿಂದ ಪೋಷಿಸಲ್ಪಟ್ಟ, ಸುಮಾರು ಎಂಟು ಕಿಲೋಮೀಟರ್ ಉದ್ದದ ರಸ್ತೆಯಲ್ಲಿರುವ ಸಾವಿರಾರು ಹೆಮ್ಮರಗಳಿಗೆ ವಿದ್ಯುತ್ ಕಂಬಗಳ ಅಳವಡಿಕೆಯಿಂದ ತೊಂದರೆ ಎದುರಾಗಿದೆ.

ಈ ರಸ್ತೆಯಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವ ಆಲ, ಹೊಂಗೆ, ಬೇವಿನಂತಹ ಮರಗಳು ಪ್ರಯಾಣಿಕರಿಗೆ ಹಚ್ಚ ಹಸಿರಿನ ಸೌಂದರ್ಯವನ್ನು ನೀಡುತ್ತವೆ. ಆದರೆ, ನೀರಾವರಿ ನಿಗಮದ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಮತ್ತು ಹೆಸ್ಕಾಂನಿಂದ ಯಾವುದೇ ಅನುಮತಿ ಪಡೆಯದೆ ನೂರಾರು ವಿದ್ಯುತ್ ಕಂಬಗಳನ್ನು ನೆಟ್ಟಿದ್ದಾರೆ. ವಿದ್ಯುತ್ ತಂತಿಗಳನ್ನು ಎಳೆಯಬೇಕಾದರೆ ಈ ಮರಗಳನ್ನು ಕಡಿಯುವುದು ಅನಿವಾರ್ಯವಾಗುತ್ತದೆ. ಬರಗಾಲ ಪೀಡಿತ ಪ್ರದೇಶದಲ್ಲಿ ಮರಗಳನ್ನು ಬೆಳೆಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವಾಗ, ಈಗ ಅವುಗಳ ನಾಶಕ್ಕೆ ಮುಂದಾಗಿರುವುದು ಖಂಡನೀಯ ಎಂದು ಮುಂಡರಗಿ ಪರಿಸರ ಪ್ರೇಮಿಗಳು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಅವರು ಕೂಡಲೇ ಕಾಮಗಾರಿ ನಿಲ್ಲಿಸಿ, ವಿದ್ಯುತ್ ಕಂಬಗಳನ್ನು ಪರ್ಯಾಯ ಮಾರ್ಗದಲ್ಲಿ ಸ್ಥಳಾಂತರಿಸಲು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮರಗಳ ಮಾರಣಹೋಮ ತಡೆಗಟ್ಟಲು ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More