ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿಯನ್ನೇ ಬಂದ್ ಮಾಡಿ ಬಿಸಿ ಮುಟ್ಟಿಸಿದ ರೈತರು
ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಬ್ಬು ಬೆಳೆಗಾರರು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಟನ್‌ಗೆ 3500 ರೂಪಾಯಿ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ, 8-9 ದಿನಗಳಿಂದ ಹೋರಾಟ ನಡೆಸಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ತೋರಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ, ನವೆಂಬರ್ 7: ಒಂದು ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆಯ ಗದ್ದನಕೇರಿ ಕ್ರಾಸ್‌ನಲ್ಲಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಸುಮಾರು 9 ದಿನಗಳಿಂದ ಕಬ್ಬು ಬೆಲೆಯ ಕುರಿತು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಮಾಲೀಕರೊಂದಿಗೆ ರೈತರ ಸಂಧಾನ ಏರ್ಪಡಿಸಿ ಸಮಸ್ಯೆ ಬಗೆಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
