ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು
ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹತ್ತಿರದ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಸಂಚಾರ ಕಂಡುಬಂದಿದೆ. ಹುಲಿ ಓಡಾಟದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರವಾಸಿಗರು ಆತಂಕಕ್ಕೀಡಾಗಿದ್ದು, ಅರಣ್ಯ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.