ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ದೆಹಲಿ-ಪಂಜಾಬ್ ನೆಟ್‌ವರ್ಕ್, ಬಿಷ್ಣೋಯ್ ಗ್ಯಾಂಗ್ ಕೈವಾಡದ ಬಗ್ಗೆ ತನಿಖೆ
ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಅವರ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್ ಚುರುಕುಗೊಳಿಸಿದೆ. ದೆಹಲಿ-ಪಂಜಾಬ್ ನೆಟ್‌ವರ್ಕ್‌ನಿಂದ ಕೃತ್ಯ ನಡೆದಿದ್ದು, ಬಿಷ್ಣೋಯ್ ಗ್ಯಾಂಗ್‌ನ ಕೈವಾಡದ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಮೂವರು ಶೂಟರ್‌ಗಳ ಪತ್ತೆಗೆ 17 ತಂಡಗಳು ಕಾರ್ಯಪ್ರವೃತ್ತವಾಗಿವೆ. ಗನ್ ಜಾಮ್ ಆದ ಕಾರಣ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಬೈ, ಅಕ್ಟೋಬರ್ 19: ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಂಬೈ ಕ್ರೈಂ ಬ್ರಾಂಚ್ ತನಿಖೆಯನ್ನು ಚುರುಕುಗೊಳಿಸಿದೆ. ಈ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದ್ದು, 17 ತಂಡಗಳನ್ನು ರಚಿಸಿ ಶೂಟರ್‌ಗಳ ಪತ್ತೆಗೆ ಬಲೆ ಬೀಸಲಾಗಿದೆ.
ಮೂವರು ಶೂಟರ್‌ಗಳು ಪಲ್ಸರ್ ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದು, ಗುಂಡಿನ ದಾಳಿಯ ಸಂದರ್ಭದಲ್ಲಿ ಗನ್ ಜಾಮ್ ಆದ ಕಾರಣ ಕೇವಲ ಐದು ಸುತ್ತು ಗುಂಡು ಹಾರಿಸಲು ಸಾಧ್ಯವಾಗಿದೆ. ಇದರಿಂದ ಟೈಗರ್ ಶ್ರಾಫ್ ದೊಡ್ಡ ಅಪಾಯದಿಂದ ಪಾರಾಗಿದ್ದು, ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಟ ಟೈಗರ್ ಶ್ರಾಫ್ ಅವರ ಮೈಮೇಲೆ ಗನ್‌ಪೌಡರ್‌ನಿಂದ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ದಾಳಿಯ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ. ಸಲ್ಮಾನ್ ಖಾನ್ ಜೊತೆ ಕೆಲಸ ಮಾಡಿದವರಿಗೆ ಎಚ್ಚರಿಕೆ ನೀಡಿದ್ದೇವೆ ಎಂದು ಹೇಳಿ ಅನಿಲ್ ಪಂಡಿತ್ ಎಂಬ ವ್ಯಕ್ತಿಯೊಬ್ಬ ಆಡಿಯೋ ಬಿಡುಗಡೆ ಮಾಡಿದ್ದಾನೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ದಾಳಿಕೋರರನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಮೂವರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
