VIDEO: ಪಾಕ್ ಬೌಲರ್ಗಳನ್ನ ಚೆಂಡಾಡಿದ ಎಬಿಡಿ: ಸೌತ್ ಆಫ್ರಿಕಾ ಚಾಂಪಿಯನ್ಸ್
Pakistan Champions vs South Africa Champions, WCL Final: 196 ರನ್ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಹಾಶಿಮ್ ಆಮ್ಲಾ ಕೇವಲ 18 ರನ್ಗಳಿಸಿ ಔಟಾದರು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಎಡಗೈ ದಾಂಡಿಗ ಜೆಪಿ ಡುಪಿನಿ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಎಬಿಡಿ ಪಾಕಿಸ್ತಾನ್ ಬೌಲರ್ಗಳನ್ನು ಚೆಂಡಾಡಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದ ಎಬಿ ಡಿವಿಲಿಯರ್ಸ್ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು.
ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ಸೌತ್ ಆಫ್ರಿಕಾ ಚಾಂಪಿಯನ್ಸ್ WCL ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡಕ್ಕೆ ಶರ್ಜೀಲ್ ಖಾನ್ ಉತ್ತಮ ಆರಂಭ ಒದಗಿಸಿದ್ದರು. 44 ಎಸೆತಗಳನ್ನು ಎದುರಿಸಿದ ಶರ್ಜೀಲ್ 4 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 76 ರನ್ ಬಾರಿಸಿದರು.
ಇನ್ನು ಮೊಹಮ್ಮದ್ ಹಫೀಝ್ 17 ರನ್ ಬಾರಿಸಿದರೆ, ಶೊಯೆಬ್ ಮಲಿಕ್ 20 ರನ್ಗಳಿಸಿದರು. ಈ ಮೂಲಕ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 195 ರನ್ಗಳಿಸಿತು.
196 ರನ್ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಹಾಶಿಮ್ ಆಮ್ಲಾ ಕೇವಲ 18 ರನ್ಗಳಿಸಿ ಔಟಾದರು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಎಬಿ ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಎಡಗೈ ದಾಂಡಿಗ ಜೆಪಿ ಡುಪಿನಿ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಎಬಿಡಿ ಪಾಕಿಸ್ತಾನ್ ಬೌಲರ್ಗಳನ್ನು ಚೆಂಡಾಡಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದ ಎಬಿ ಡಿವಿಲಿಯರ್ಸ್ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು.
ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಎಬಿಡಿ 60 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ ಅಜೇಯ 120 ರನ್ ಬಾರಿಸಿದರು. ಅತ್ತ ಜೆಪಿ ಡುಮಿನಿ 28 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 16.5 ಓವರ್ಗಳಲ್ಲಿ 197 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ 2025ರ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಸೌತ್ ಅಫ್ರಿಕಾ ಚಾಂಪಿಯನ್ಸ್ ತಂಡವು ಚೊಚ್ಚಲ ಬಾರಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ.
