ಕ್ರಾಂತಿ ಕಿಚ್ಚಿನ ಮಧ್ಯೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ಪುನಾರಚನೆ ಕುರಿತ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಎಐಸಿಸಿ ಅಧ್ಯಕ್ಷರ ಭೇಟಿ ಪಕ್ಷದ ಸಾಮಾನ್ಯ ವಿಚಾರಕ್ಕೆ ಸಂಬಂಧಿಸಿದೆ ಎಂದಿದ್ದಾರೆ. ಇತ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ.
ನವದಹಲಿ, ನವೆಂಬರ್ 17: ನವೆಂಬರ್ ಕ್ರಾಂತಿ ಚರ್ಚೆಗಳ ನಡುವೆಯೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇಕೆ ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಮತ್ತು ಯಾವುದೇ ರಾಜಕೀಯ ಚಟುವಟಿಕೆಗಳು ಗರಿಗೆದರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದು ಪಕ್ಷದ ಸಾಮಾನ್ಯ ವಿಚಾರಗಳ ಬಗ್ಗೆ ಚರ್ಚಿಸಲು ಹೊರತು ಯಾವುದೇ ವಿಶೇಷ ಕಾರಣಗಳಿಗಲ್ಲ ಎಂದು ಅವರು ಹೇಳಿದ್ದಾರೆ. ‘ಕಾಂಗ್ರೆಸ್ ಪಕ್ಷ ಇದ್ದರೆ ಮಾತ್ರ ನಾವು ಎಲ್ಲರೂ’ ಎಂದರು.
ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳು, ಬೆಳೆ ಹಾನಿ ಪರಿಹಾರ ಮತ್ತು ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ. ರಾಜ್ಯದ ಹಿತಾಸಕ್ತಿಗಳನ್ನು ಪ್ರಧಾನಿಯವರ ಗಮನಕ್ಕೆ ತರುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ.
