ಮುಡಾ ಹಗರಣ: ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಇದೀಗ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿವೆ. ಆದ್ರೆ, ರಾಜೀನಾಮೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಕಡ್ಡಿ ಮುರಿದಂತೆ ಮಾತನಾಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 24): ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ನಾನು ರಾಜೀನಾಮೆ ಕೊಡಬೇಕಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕೇಳಿದ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ನಾನು ಫೈಟ್ ಮಾಡುತ್ತೇನೆ ಎಂದರು.