ಹಾವೇರಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಅರ್ಧಗಂಟೆಗಿಂತ ಹೆಚ್ಚು ಗುಡುಗು ಸಿಡಿಲು ಸಹಿತ ಮಳೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಸುತ್ತಾಮುತ್ತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬಿಸಿಲಿನಿಂದ ಕೆಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಭಾರಿ ಮಳೆಗೆ ದೊಡ್ಡಬಳ್ಳಾಪುರ ದೇವನಹಳ್ಳಿ ರಸ್ತೆಯಲ್ಲಿ ಮರದ ಕೊಂಬೆ ಉರುಳಿ ಬಿದ್ದಿದೆ. ಬಿರುಗಾಳಿಗೆ ಮರ ರಸ್ತೆಗೆ ಬಿದ್ದ ಕಾರಣ ವಾಹನ ಸವಾರರು ಪರದಾಡಿದರು.
ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ, ಮಲ್ಲಂದೂರು, ಗಿರಿ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಮೂಡಿಗೆರೆ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದೆ.
ಕೋಲಾರ ಸೇರಿದಂತೆ ಬಂಗಾರಪೇಟೆ, ಮುಳಬಾಗಲು ಸೇರಿ ಹಲವೆಡೆ ಒಂದು ಗಂಟೆಗಿಂತ ಹೆಚ್ಚು ಮಳೆಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಕಳೆದರೆಡು ದಿನಗಳಿಂದ ಮಳೆ ಸುರಿಯುತ್ತಿದೆ. ಬಿಸಿಲಿನ ತಾಪದಿಂದ ಬೆಂದಿದ್ದ ಜನರಿಗೆ ತಂಪಾಗಿದೆ.
ಮುಂದಿನ 3 ಗಂಟೆಗಳಲ್ಲಿ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರಿನ ಕೋರಮಂಗಲದಲ್ಲಿ ಅತ್ಯಧಿಕ 39 ಮಿಮೀನಷ್ಟು ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೇ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮುಂದಿನ ಎರೆಡು ದಿನಗಳ ಕಾಲ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ 6 ರಂದು ಮಳೆಯಾಗಲಿದೆ.