
ದುಬೈ, ನವೆಂಬರ್ 24: ಯುಎಇಯ ರಾಸ್ ಅಲ್ ಖೈಮಾದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯರೂ ಸೇರಿದ್ದಾರೆ ಎಂಬುದನ್ನು ದುಬೈನಲ್ಲಿರುವ ಭಾರತೀಯ ದೂತಾವಾಸ ಇಂದು ದೃಢಪಡಿಸಿದೆ. ರಾಸ್ ಅಲ್ ಖೈಮಾದ ದಕ್ಷಿಣ ಭಾಗದ ಅಲ್ ವತನ್ ರಸ್ತೆಯಲ್ಲಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ 41 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ಬಸ್ ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
ಈ ಘಟನೆಯ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ದೂತಾವಾಸ, “ರಾಸ್ ಅಲ್ ಖೈಮಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಹಲವರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ” ಎಂದು ಬರೆದುಕೊಂಡಿದೆ. ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿರುವ ಭಾರತೀಯ ದೂತಾವಾಸವು, ನೆರವು ಅಥವಾ ಮಾಹಿತಿಗಾಗಿ 24 ಗಂಟೆಗಳ ಉಚಿತ ಸಹಾಯವಾಣಿ ಸಂಖ್ಯೆ 800-46342 ಅನ್ನು ಹಂಚಿಕೊಂಡಿದೆ.
ಅಪಘಾತ ಸಂಭವಿಸಿದ್ದು ಹೇಗೆ?:
ಯುಎಇ ಆಂತರಿಕ ಸಚಿವಾಲಯ ಹಂಚಿಕೊಂಡಿರುವ ವಿವರಗಳ ಪ್ರಕಾರ, ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಪ್ರಯಾಣಿಕರ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆರಂಭದಲ್ಲಿ ಸ್ಥಳದಲ್ಲೇ 11 ಜನ ಸಾವನ್ನಪ್ಪಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೂ ಇಬ್ಬರು ಪ್ರಯಾಣಿಕರು ಕೊನೆಯುಸಿರೆಳೆದ ನಂತರ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. ಈ ಘಟನೆಯಲ್ಲಿ ಇತರ 14 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಕಾರು ಲಾರಿ ಡಿಕ್ಕಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ 41 ಪ್ರಯಾಣಿಕರಿದ್ದರು ಎಂದು ‘ಖಲೀಜ್ ಟೈಮ್ಸ್’ ವರದಿ ಮಾಡಿದೆ. ತಾಂತ್ರಿಕ ದೋಷದಿಂದಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ತುರ್ತು ರಕ್ಷಣಾ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿವೆ. ಮೃತರ ರಾಷ್ಟ್ರೀಯತೆಯ ಸಂಪೂರ್ಣ ಪಟ್ಟಿಯನ್ನು ಸ್ಥಳೀಯ ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಬೇಕಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ