ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಭಾಗವಹಿಸಲು ಫಿಲಿಪೈನ್ಸ್‌ಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಆಗ್ನೇಯ ಏಷ್ಯಾ ಮತ್ತು ಪೂರ್ವ ಏಷ್ಯಾದ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳ ಕುರಿತು ಚರ್ಚಿಸುವ ಉದ್ದೇಶದಿಂದ 2 ಪ್ರಮುಖ ಶೃಂಗಸಭೆಗಳಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಫಿಲಿಪೈನ್ಸ್‌ಗೆ ಬಂದಿಳಿದಿದ್ದಾರೆ. ಫಿಲಿಪೈನ್ಸ್ ಅಧ್ಯಕ್ಷ ಫರ್ಡಿನಾಂಡ್ ಆರ್. ಮಾರ್ಕೋಸ್ ಜೂನಿಯರ್ ಅವರ ಆಹ್ವಾನದ ಮೇರೆಗೆ ಮನಿಲಾಗೆ ತೆರಳಿರುವ ಪ್ರಧಾನಿ ಮೋದಿ, ಮಂಗಳವಾರ ನಡೆಯಲಿರುವ 23ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮನಿಲಾ, ನವೆಂಬರ್ 16: 23ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ನವೆಂಬರ್ 16) ಫಿಲಿಪೈನ್ಸ್ ರಾಜಧಾನಿ ಮನಿಲಾಗೆ ಬಂದಿಳಿದಿದ್ದಾರೆ. ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಫಿಲಿಪೈನ್ಸ್ ಕಲಾವಿದರು ಜಾನಪದ ನೃತ್ಯದ ಮೂಲಕ ಪ್ರಧಾನಿ ಮೋದಿಗೆ ಸ್ವಾಗತ ನೀಡಿದರು. ಫಿಲಿಪೈನ್ಸ್ ಅಧ್ಯಕ್ಷ ಫರ್ಡಿನಾಂಡ್ ಆರ್. ಮಾರ್ಕೋಸ್ ಜೂನಿಯರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಇಂದು ಮತ್ತು ನಾಳೆ 2 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ.
2026ನೇ ಸಾಲಿನ ಆಸಿಯಾನ್ ಅಧ್ಯಕ್ಷತೆಯನ್ನು ವಹಿಸಿರುವ ಫಿಲಿಪೈನ್ಸ್, ನವೆಂಬರ್ 17ರಂದು ಈ ಶೃಂಗಸಭೆಗಳನ್ನು ಆಯೋಜಿಸಿದೆ. ಭಾರತದ ‘ಆಕ್ಟ್ ಈಸ್ಟ್’ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನದಲ್ಲಿ ಆಸಿಯಾನ್ ಸಂಬಂಧಗಳು ಕೇಂದ್ರ ಸ್ಥಾನವನ್ನು ಹೊಂದಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಶೃಂಗಸಭೆಯಲ್ಲಿ ‘ಆಸಿಯಾನ್-ಭಾರತ ಕ್ರಿಯಾ ಯೋಜನೆ ಸೇರಿದಂತೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು.
ಇದನ್ನೂ ಓದಿ: ಆಸಿಯಾನ್ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಫಿಲಿಪೈನ್ಸ್‌ಗೆ ಪ್ರಯಾಣ: ಕಡಲ ಭದ್ರತೆ, ವ್ಯಾಪಾರ ವೃದ್ಧಿಗೆ ಒತ್ತು
2026ನೇ ವರ್ಷವನ್ನು ‘ಭಾರತ-ಆಸಿಯಾನ್ ಸಾಗರ ಸಹಕಾರ ವರ್ಷ’ ಎಂದು ಘೋಷಿಸಲಾಗಿದೆ. ಕಡಲ ಭದ್ರತೆ, ಜಂಟಿ ಗಸ್ತು, ಕಡಲ್ಗಳ್ಳತನ ತಡೆಗಟ್ಟುವಿಕೆ, ವ್ಯಾಪಾರ, ಮೂಲಸೌಕರ್ಯ ಸಂಪರ್ಕ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
“ಭವಿಷ್ಯದತ್ತ ಪಯಣ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿರುವ ಈ ಶೃಂಗಸಭೆಗಳಲ್ಲಿ, ಆಸಿಯಾನ್ ರಾಷ್ಟ್ರಗಳ ಜೊತೆಗೆ ಅಮೆರಿಕ, ಚೀನಾ, ಜಪಾನ್, ರಷ್ಯಾ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ರಾಷ್ಟ್ರಗಳ ನಾಯಕರು ಭಾಗವಹಿಸುತ್ತಿದ್ದಾರೆ. ಪ್ರಾದೇಶಿಕ ಭದ್ರತೆ, ಭೌಗೋಳಿಕ ರಾಜಕೀಯ ಬೆಳವಣಿಗೆಗಳು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವ ಕುರಿತು ನಾಯಕರು ವಿಚಾರ ವಿನಿಮಯ ನಡೆಸಲಿದ್ದಾರೆ.
#WATCH | Philippines: Prime Minister Narendera Modi receives a grand welcome at the Manila International Airport. He is on a three-day visit to the Philippines to participate in the 23rd ASEAN-India Summit and the 21st East Asia Summit.
(Source: DD News/ANI) https://t.co/aVHLWUSPWG
— ANI (@ANI) November 16, 2026
ಭಾರತೀಯ ಸಮುದಾಯದೊಂದಿಗೆ ಸಂವಾದ:
ಮನಿಲಾ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಫಿಲಿಪೈನ್ಸ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಸದಸ್ಯರನ್ನೂ ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
